ಸುದ್ದಿವಿಜಯ, ಜಗಳೂರು: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಮಂಗಳವಾರ ಜಗಳೂರು ಪಟ್ಟಣದಲ್ಲಿ ಅದ್ದೂರಿಯಾಗಿ ಪ್ರಾರಂಭಗೊಂಡಿತು. ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನ ಅನೂಚಾನವಾಗಿ ನಡೆದುಕೊಂಡು ಬಂದಿರುವ ಧಾರ್ಮಿಕ ವಿಧಿವಿಧಾನಗಳಿಗೆ ಬೆಳಿಗ್ಗೆ 5ರ ಬ್ರಾಹ್ಮೀ ಮಹೂರ್ತದಲ್ಲಿ ಚಾಲನೆ ನೀಡಲಾಯಿತು.
ಮಂಗಳವಾರ ಬೆಳಗ್ಗೆ ಪಟ್ಟಣದ ಪಂಪ್ ಹೌಸ್ ನಲ್ಲಿ ದೇವಿಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಗಂಗಾ ಪೂಜೆ ನೆರವೇರಿಸಿ ಜೀವದ ಕಾಳು ತುಂಬಲಾಯಿತು. ಧಾರ್ಮಿಕ ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳ ಪಾಲ್ಗೊಂಡಿದ್ದರು.
ಪಂಪ್ ಹೌಸ್ ನಿಂದ ಮಂಗಳವಾದ್ಯಗಳೊಂದಿಗೆ ಪಟ್ಟಣದ ಹೊಸ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಹೊಸ ಬಸ್ ನಿಲ್ದಾಣ, ಡಾ. ರಾಜ್ ಕುಮಾರ್ ರಸ್ತೆ, ಹಳೆ ಮಹಾತ್ಮಗಾಂಧಿ ವೃತ್ತ, ಜೆಸಿಆರ್ ಬಡಾವಣೆ, ನೆಹರು ರಸ್ತೆ, ಹಳೆ ತಾಲೂಕು ಆಫೀಸ್ ರಸ್ತೆ, ಭುವನೇಶ್ವರಿ ವೃತ್ತ, ಮಂಜುನಾಥ್ ಬಡಾವಣೆ, ಹೊರಕೆರೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಮ್ಮನವರ ಮೆರವಣಿಗೆ ಸಾಗಿತು.
ಪೂಜಾ ಕಾರ್ಯಕ್ರಮದ ನಂತರ ದೇವಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ದೇವರ ದರ್ಶನಕ್ಕೆ ಕಾದುನಿಂತ ಭಕ್ತರು :
ಶ್ರೀ ಮಾರಿಕಾಂಬಾಜಾತ್ರೆಯ ಮೊದಲ ದಿನದಂದು ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿ 2 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಪೂಜೆಯ ಸಂದರ್ಭದಲ್ಲಿ ದೇವರದರ್ಶನಕ್ಕೆ ನಿಂತಿದ್ದ ಸರದಿ ಸಾಲಿನಲ್ಲಿಭಕ್ತರುನಿಂತಿದ್ದರು.
ಜನ ಪ್ರತಿನಿದಿಗಳು ಭಾಗಿ:
ಶಾಸಕ ಎಸ್.ವಿ ರಾಮಚಂದ್ರ, ಮಾಜಿ ಶಾಸಕ ಎಚ್.ಪಿ ರಾಜೇಶ್, ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ , ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಪಾಲಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.