ಸುದ್ದಿವಿಜಯ: ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದವರ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ವರದಿ ನೀಡಲು ರಚಿಸಿದ ನ್ಯಾ. ನಾಗಮೋಹನದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 7ರಂದು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ.
ಅಂದು ಬೆಳಿಗ್ಗೆ 11.30ಕ್ಕೆ ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾರಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಎಸ್‍ಸಿ ಮತ್ತು ಎಸ್‍ಟಿ ಜನಾಂಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ಸಂಬಂಧ ನಾಗಮೋಹನದಾಸ್ ಸಮಿತಿ ನೀಡಿರುವ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಹಲವು ದಿನಗಳಿಂದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಪರಿಶಿಷ್ಟ ಜಾತಿಯವರಿಗೆ ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ 3ರಿಂದ ಶೇ 7.5ಕ್ಕೆ ಮೀಸಲಾತಿ ಹೆಚ್ಚಿಸುವಂತೆ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿರುವ ಅಂಶಗಳ ಕುರಿತು ಎಲ್ಲ ಪಕ್ಷಗಳ ಮುಖಂಡರ ಸಲಹೆ, ಅಭಿಪ್ರಾಯ ಪಡೆದು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.h