ಸುದ್ದಿವಿಜಯ, ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಆಚೆ ಉಳಿದಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಸ್ಟಾರ್ ಪ್ರಚಾರಕಿಯಾಗಿ ಹೊರಹೊಮ್ಮಿದ್ದಾರೆ.
ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದ್ದು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಶತಾಯಗತಾಯ ಸಿದ್ದಮಾಡಿಕೊಂಡಿದೆ.
ಬುಧವಾರ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಜನರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೂ ಸ್ಥಾನ ನೀಡಲಾಗಿದೆ.
ಉಳಿದಂತೆ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕರ್ನಾಟಕ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಈ ಪಟ್ಟಿಯಲ್ಲಿ ಇದ್ದಾರೆ. ಆದರೆ, ಪ್ರಮುಖವಾಗಿ ಸಚಿನ್ ಪೈಲಟ್ ಅವರ ಹೆಸರಿಲ್ಲ.
ಶೆಟ್ರು ಕಾಂಗ್ರೆಸ್ ನಲ್ಲಿ ಸ್ಟಾರ್ ಆದ್ರು:
ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರಿಗೂ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಲಭಿಸಿದ್ದು, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಶಶಿ ತರೂರ್ ಅವರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಜೊತೆಗೆ ನಟಿ ಉಮಾಶ್ರೀ ಹಾಗೂ ಸಾಧುಕೋಕಿಲ ಅವರಿಗೂ ಕೂಡ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.
ಇನ್ನೂ, ಕೆಎಚ್ ಮುನಿಯಪ್ಪ, ವೀರಪ್ಪ ಮೊಯ್ಲಿ, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಬಿ ಕೆ ಹರಿಪ್ರಸಾದ್, ಡಿಕೆ ಸುರೇಶ್, ಎಚ್‌ಎಂ ರೇವಣ್ಣ, ಜಿ ಸಿ ಚಂದ್ರಶೇಖರ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕನ್ನಯ್ಯಾ ಕುಮಾರ್, ಮೊಹಮದ್ ಅಜರುದ್ದೀನ್, ಇಮ್ರಾನ್ ಪ್ರತಾಪ್‌ಗರಿಗೂ ಕೂಡ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.