ಸುದ್ದಿವಿಜಯ,ಜಗಳೂರು: ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳಿಸುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬರದಿಂದ ಮುಕ್ತವಾಗಲು ಸರಕಾರ 57 ಕೆರೆಗಳನ್ನು ತುಂಬಿಸುವ ಏತನೀರಾವರಿ ಯೋಜನೆ ಜಾರಿಗೆ ತಂದಿದೆ. ಜೊತೆಗೆ ಭದ್ರಾಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಬರದ ತಾಲೂಕು ಜಗಳೂರಿಗೆ ಈ ಯೋಜನೆಗಳು ವರದಾನವಾಗಲಿವೆ. ಜನರ ಜೀವನ ಮಟ್ಟ ಸುಧಾರಿಸಲು ಸರಕಾದ ಯೋಜನೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ದಾವಣಗೆರೆಯಲ್ಲಿ ವಿಮಾನ ನಿಲ್ದಾಣ, ಜವಳಿ ಪಾರ್ಕ್ ಮತ್ತು ಬೃಹದಾಕಾರವಾಗಿ ಬೆಳೆಯುತ್ತಿರುವ ದಾವಣಗೆರೆ ಜನತೆಗೆ ದಿನದ 24 ಗಂಟೆ ನೀರು ಪೂರೈಸುವ ಯೋಜನೆ ಸೇರಿದಂತೆ ಮೂಲಸೌಕರ್ಯ ವೃದ್ಧಿಗೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ.
ಅಮೃತ ಯೋಜನೆ ಅಡಿಯಲ್ಲಿ ಸ್ಥಾಪನೆಯಾಗಿರುವ ರೈತ ಉತ್ಪಾದಕ ಕಂಪನಿಗಳನ್ನು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುವುದು. ದಾವಣಗೆರೆ ಸುತ್ತಮುತ್ತ ಒಂದು ಸಾವಿರ ಎಕರೆ ವಿಸ್ತೀರ್ಣದಲ್ಲಿ ಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಅದರ ಬಗ್ಗೆ ಪರಿಶೀಲಿಸಲಾಗುವುದು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತೇನೆ ಎಂದು ಪತ್ರಕರ್ತರಿಗೆ ಡಿಸಿ ಉತ್ತರಿಸಿದರು.