ಸುದ್ದಿವಿಜಯ, ಜಗಳೂರು: ರಾಜ್ಯ ಸರಕಾರ ಮಾತು ತಪ್ಪಿದ್ದು 7ನೇ ವೇತನ ಆಯೋಗ ಜಾರಿ ಮತ್ತು ಎನ್‍ಪಿಎಸ್ ರದ್ಧತಿ ಮಾಡದೇ ಇರುವ ಕಾರಣ ಪ್ರಮುಖ ಬೇಡಿಕೆಗಳನ್ನು ಈಡೇರಿಸುವವರೆಗೂ ಕರ್ತವ್ಯಕ್ಕೆ ಹಾಜರಾಗದೇ ಮಾಚ್.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಆರ್.ಚಂದ್ರಪ್ಪ ತಿಳಿಸಿದರು.
ಪಟ್ಟಣದ ಪ್ರೆಸ್‍ಕ್ಲಬ್‍ನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‍ಪಿಎಸ್ ರದ್ಧತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಿ ನೌಕರರ ಪೂರ್ವಭಾವಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ ನಮ್ಮ ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಿಲ್ಲ. ಹಾಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.
ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‍ನಲ್ಲಿ ಸರಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಹೀಗಾಗಿ ನಮಗೆ ನಿರಾಶೆ ಮೂಡಿಸಿದೆ. ಕಳೆದ ಜುಲೈ.1ರಿಂದ ವೇತನ ಆಯೋಗದ ಸೌಲಭ್ಯಗಳನ್ನು ಸರಕಾರ ಜಾರಿಗೊಳಿಸಬೇಕಿತ್ತು. ಆದರೆ ನಮ್ಮ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಯ ವಿಸ್ತøತ ವರದಿ ನೀಡಲಾಗಿದ್ದರೂ ಅದಕ್ಕೆ ಸರಕಾರ ಸ್ಪಂದಿಸದ ಕಾರಣ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.
ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ಕಾಲ ಕಾಲಕ್ಕೆ ವೇತನ ಪರಿಷ್ಕರಣೆ ಹಾಗೂ ಭತ್ಯೆ ಪಡೆಯುವುದು ನಮ್ಮ ಮೂಲಭೂತ ಹಕ್ಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಆರನೇ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲೇ ಶೇ.40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ಜಾರಿಗೆ ಮಾಡಬೇಕು.
ರಾಜ್ಯ ಎನ್‍ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಕಷ್ಟಕರವಾಗಿರುವುದರಿಂದ ಎನ್‍ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಎನ್‍ಪಿಎಸ್ ರದ್ದುಗೊಳಿಸಿ ಹಳೇ ಪಿಂಚಿಣಿ ಯೋಜನೆ ಜಾರಿಗೊಳಿಸುವವರೆಗೂ ನಿರಂತರ ಹೋರಾಟ ಮಾಡುತ್ತೇವೆ. ಯಾರೂ ಸಹ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ನಿವೃತ್ತ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಾಲಯ್ಯ, ಮುಖ್ಯೋಪಾಧ್ಯಯರ ಸಂಘದ ಅಧ್ಯಕ್ಷ ಬಾಬುರೆಡ್ಡಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಿ.ಮಹಾಂತೇಶ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಹನುಮಂತೇಶ ಮಾತನಾಡಿ ಸರಕಾರಕ್ಕೆ ತಮ್ಮ ಬೇಡಿಕೆಗಳ ಬಗ್ಗೆ ವಿವರಿಸಿದರು.