ಸುದ್ದಿವಿಜಯ, ಬೆಂಗಳೂರು: ಲೋಕಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಬರೋಬ್ಬರಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. ಇತ್ತ ಕೈ ನಾಯಕರಿಗೆ ಠಕ್ಕರ್ ಕೊಡಲು ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಕೈ ಪಾಳಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ.
ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಉತ್ತರ ಭಾರತದ ರಾಜ್ಯಗಳಲ್ಲೂ ಚುನಾವಣೆ ಉತ್ತಮವಾಗಿ ನಡೆಯುತ್ತಿದ್ದು ಜನ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳ ಆಸುಪಾಸು ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಮತ್ತೆ ನಿಮ್ಮ ಹೆಸರು ಪ್ರಸ್ತಾಪ ಮಾಡಿ 100 ಕೋಟಿ ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ.
ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಅವನಂತಹ ಮೆಂಟಲ್ ಗಿರಾಕಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವನು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ.
ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ? ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆ ಸೇರಬೇಕಾದವರ ಮಾತಿಗೆ ಇಷ್ಟು ಪ್ರಾಮುಖ್ಯತೆ ನೀಡುವುದು ಸರಿಯಲ್ಲ ಎಂದು ತಿಳಿಸಿದರು.