ಸುದ್ದಿವಿಜಯ, ಜಗಳೂರು: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಅವರು ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಆಯ್ಕೆ ಸಭೆಯಲ್ಲಿ ಭಾಗವಹಿಸಿದ ನಂತರ ಸೋಮವಾರ ಮತ್ತು ಮಂಗಳವಾರ ವಿವಿಧ ಮಠಾಧೀರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸೋಮವಾರ ಸಂಜೆ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳನ್ನು ಶಾಂತಿವನದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದು ಕೆಲ ಕಾಲ ಚರ್ಚೆನಡೆಸಿದರು. ನಂತರ ಉಜ್ಜಿನಿ ಮಠದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಜಗಳೂರಿಗೆ ಆಗಮಿಸಿದ ಅವರು ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ತಹಶೀಲ್ದಾರ್ ಜಿ.ಸಂತೋಷ್ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಸೇರಿದಂತೆ ತಾಲೂಕು ಮಟ್ಟದ ಇಲಾಖಾವಾರು ಅಧಿಕಾರಿಗಳು, ಅಭಿಮಾನಿಗಳು ಅವರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಹೂವಿನ ಹಾರ ಮತ್ತು ಶಾಲು ಹಾಕಿ ಸನ್ಮಾನಿಸಿದರು.
ಮಂಗಳವಾರ ಮಧ್ಯಾಹ್ನ ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಅಲ್ಲಿಂದ ನೇರವಾಗಿ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿಗಳ ಭೇಟಿ ಮಾಡಿದ ನಂತರ ಬೆಳ್ಳುಡಿಯ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರದ ವಾಲ್ಮಿಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಚರ್ಚಿಸಿದರು.